ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Spread the love

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ 2ನೇ ಬಾರಿಗೆ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಂತ ಬೃಹತ್ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಗೌಪ್ಯ ಪ್ರಮಾಣವಚನ ಭೋಧಿಸಿದರು.

ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಸಿದ್ಧರಾಮಯ್ಯ ಅವರು 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಉಪ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಮುಖ್ಯಸ್ಥ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಂಪುಟ ದರ್ಜೆಯ ಸಚಿವರಾಗಿ 8 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರ :

ಸಿಎಂ, ಡಿಸಿಎಂ ಪ್ರಮಾಣವಚನದ ಬಳಿಕ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಡಾ.ಜಿ ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಬಳಿಕ ಕೆಹೆಚ್ ಮುನಿಯಪ್ಪ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಳಿಕ ಕೆಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರೇ, ಶಾಸಕ ಎಂ.ಬಿ ಪಾಟೀಲ್ ಅವರು ಕೂಡ ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬುದ್ಧ ಬಸವನ ಹೆಸರಿನಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಶಾಸಕ ಪ್ರಿಯಾಂಕ್ ಖರ್ಗೆ ಅವರು ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರು 2016ರಲ್ಲಿ ಐಟಿ ಮತ್ತು ಬಿಟಿ ಸಚಿವರಾಗಿದ್ದರು. ಕೆಪಿಸಿಸಿ ಸಂವಹ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದರು.

1985ರಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, 1989ರಲ್ಲಿ ಜಯನಗರ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿ, ಬಿಟಿಎಂ ಲೇಔಟ್ ಕ್ಷೇತ್ರದಿಂದ ನಾಲ್ಕುಬಾರಿಯಾಗಿ ಶಾಸಕರಾಗಿ ಆಯ್ಕೆಯಾಗಿದ್ದಂತ ರಾಮಲಿಂಗಾರೆಡ್ಡಿಯವರು ಇಂದು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಳಿಕ ಚಾಮರಾಜಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾ ಹಾಗೂ ತಾಯಿಯ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಅಂದಹಾಗೆ ಜಮೀರ್ ಅಹ್ಮದ್ 2008ರಲ್ಲಿ ಜೆಡಿಎಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಮತ್ತೊಮ್ಮೆ ಜೆಡಿಎಸ್ ನಿಂದ, 2018ರಲ್ಲಿ ಕಾಂಗ್ರೆಸ್ ಸೇರ್ಪಡೆ, 2023ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾದಂತ ಜಮೀರ್, ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.