ಬೆಂಗಳೂರು: ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತರಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಈ ಸಂಬಂಧ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ ಎಂದು ಹೇಳಿದ್ದಾರೆ.