ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಬಿಜೆಪಿಗೆ ಮುಖಭಂಗ ಉಂಟು ಮಾಡಿದ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಮತದಾನಕ್ಕೆ ಗೈರು ಹಾಜರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ ಮುಂದಾಗಿದೆ.
ಈ ಕುರಿತಾಗಿ ಸ್ಪೀಕರ್ ಗೆ ದೂರು ನೀಡಿ, ಕಾನೂನು ಹೋರಾಟಕ್ಕೆ ಬಿಜೆಪಿ ಚಿಂತನೆ ನಡೆಸಿದೆ. ಆದರೆ, ಅದಕ್ಕಿಂತ ಮೊದಲೇ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಶಾಸಕ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ವಿಧಾನಸಭೆ ಅಧ್ಯಕ್ಷ ರನ್ನು ಸಂಪರ್ಕಿಸಿ ರಾಜೀನಾಮೆ ನೀಡುವ ಬಗ್ಗೆ ಸಮಯ ಕೇಳಿದ್ದಾರೆ ಎಂದು ಹೇಳಲಾಗಿದೆ.
ಎಸ್.ಟಿ. ಸೋಮಶೇಖರ್ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಆಫರ್ ನೀಡಿದೆ. ಸೋಮಶೇಖರ್ ಅವರ ರಾಜೀನಾಮೆಯಿಂದ ತೆರವಾಗುವ ಯಶವಂತಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅವರ ಪುತ್ರನಿಗೆ ಟಿಕೆಟ್ ಕೊಡುವ ಭರವಸೆ ನೀಡಲಾಗಿದೆ. ಶಿವರಾಮ್ ಹೆಬ್ಬಾರ್ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು, ಅವರ ಪುತ್ರನಿಗೆ ಯಲ್ಲಾಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಕೊಡುವ ಭರವಸೆ ನೀಡಲಾಗಿದೆ ಎಂದು ಹೇಳಲಾಗಿದೆ.