ಬೆಂಗಳೂರು: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೋಗಳನ್ನು ತಂದು ಕೊಟ್ಟಿದ್ದೆ ಡಿಕೆಶಿಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಕುಮಾರಸ್ವಾಮಿ ಅವರು ದೂರಿದರು.
ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.