ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಈಗಾಗಲೇ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದಾರೆ. ಅದರಲ್ಲೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ನಿನ್ನೆ ರಾತ್ರಿ ಮಹತ್ವದ ಚರ್ಚೆಯನ್ನು ಮಾಡಿದ್ದರು. ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೂ ನಡ್ಡಾ ಜೊತೆಗಿನ ಚರ್ಚೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ಇಂದು ರಾತ್ರಿ ಸಂಪುಟ ಸೇರುವವರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದರು.
ಇಂದು ರಾತ್ರಿಯೊಳಗೆ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲಿ ಯಾರು ಸೇರಬೇಕು ಎಂಬುದು ತೀರ್ಮಾನವಾಗಲಿದೆ ಎಂಬ ಮಾಹಿತಿ ದೆಹಲಿ ಬಿಜೆಪಿ ವಲಯದಿಂದ ಬಂದಿದೆ. ಜೊತೆಗೆ ಆಗಸ್ಟ್ 4 ರಂದು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂಬ ಮಾಹಿತಿಯಿತ್ತು. ಆದರೆ ನೂತನ ಸಚಿವರ ಪಟ್ಟಿ ಬಿಡುಗಡೆಯಾದಲ್ಲಿ ಬೇಗನೆ ಪ್ರಮಾಣ ವಚನ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಬಂದಿದ್ದು, ಎರಡು ಹಂತಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ತೀರ್ಮಾನ ಮಾಡಿದೆ ಎನ್ನಲಾಗಿದೆ.
ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ?
ಇಂದು ರಾತ್ರಿ ಬಿಜೆಪಿ ಹೈಕಮಾಂಡ್ ರಾಜ್ಯ ಸಚಿವ ಸಂಪುಟದ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಿದೆ. ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಯಾರು ಇರಬೇಕು ಎಂಬುದು ಅಂತಿಮವಾಗಲಿದೆ. ಇಂದು ರಾತ್ರಿಯೇ ನೂತನ ಸಚಿವರ ಪಟ್ಟಿಯನ್ನು ಹೈಕಮಾಂಡ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಡಲಿದೆ. ಇಂದು ರಾತ್ರಿ ಪಟ್ಟಿ ಪ್ರಕಟವಾದಲ್ಲಿ ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ಮಾಡಿ ಮುಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀರ್ಮಾನ ಮಾಡಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೆ ಕಾರಣವೂ ಇದೆ.
ಹೈಕಮಾಂಡ್ ಬಿಡುಗಡೆ ಮಾಡುವ ಪಟ್ಟಿಯಲ್ಲಿ ಹೆಸರು ಇಲ್ಲದವರು ಅಸಮಾಧಾನಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಹೈಕಮಾಂಡ್ ಪಟ್ಟಿ ಕೊಟ್ಟ ಕೂಡಲೇ ಮೊದಲ ಹಂತದ ಮಂತ್ರಿ ಮಂಡಲ ವಿಸ್ತರಣೆ ಆಗಲಿದೆ ಎನ್ನಲಾಗಿದೆ.
ಇನ್ನು ಮತ್ತೊಂದು ಮಹತ್ವದ ಬೆಳವಣಿಗೆ ಬಿಜೆಪಿಯಲ್ಲಿ ಆಗುತ್ತಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿ ಮುಖ್ಯಮಂತ್ರಿ ಹುದ್ದೆ ತ್ಯಾಗ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಿಎಂ ಬೊಮ್ಮಾಯಿ ಸಂಪುಟ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಯಲ್ಲಿದ್ದಾರೆ. ಹೀಗಾಗಿ ಈ ಮಾಹಿತಿಗೆ ಹೆಚ್ಚಿನ ಮಹತ್ವ ಬಂದಿದೆ.
ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಬಿ.ವೈ. ವಿಜಯೇಂದ್ರ, ಸಚಿವ ಸಂಪುಟ ಸೇರ್ಪಡೆ ಕುರಿತು ಪ್ರಶ್ನೆಗೆ ನೇರವಾಗಿ ಉತ್ತರಿಸಿಲ್ಲ. ಬದಲಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕುರಿತು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ವಿಜಯೇಂದ್ರ ಅವರು ಸಿಎಂ ಬೊಮ್ಮಾಯಿ ಸಂಪುಟದ ಸದಸ್ಯರಾಗುತ್ತಾರಾ? ಎಂಬ ಚರ್ಚೆಗೆ ಇಂದು ರಾತ್ರಿ ಉತ್ತರ ಸಿಗಲಿದೆ.