ಸಿಎಂ ಸಿದ್ದರಾಮಯ್ಯ ಆಯ್ತು ಈಗ ಸಚಿವ MB ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ!

Spread the love

ಬೆಂಗಳೂರು : ಸದ್ಯ ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಭಾರಿ ಚರ್ಚೆ ಆಗುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಈ ಕುರಿತು ಹೈಕೋರ್ಟ್ ವಿಚಾರಣೆ ನಡೆಸಿ ಅರ್ಜಿ ವಿಚಾರಣೆ ಆಗಸ್ಟ್ 29ಕ್ಕೆ ಮುಂದೂಡಿ ಅದೇಶಿಸಿದೆ. ಇದರ ಮಧ್ಯ ಸಚಿವ MB ಪಾಟೀಲ್ ವಿರುದ್ಧ ಕೂಡ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ.

ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಇದೀಗ ಬೃಹತ್ ಕೈಗಾರಿಕೆ ಸಚಿವ MP ಪಾಟೀಲ್ ವಿರುದ್ಧವು ಕೂಡ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. KIADB ಭೂಮಿಯನ್ನು ಎಂಬಿ ಪಾಟೀಲರು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಇಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಎಂಬಿ ಪಾಟೀಲ್‌ KIADB ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ. ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ‌ ಹಂಚಿಕೆಯಲ್ಲಿ ಅಕ್ರಮ‌ ಎಸಗಲಾಗಿದೆ.ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ. ಇವರ ಕೆಲಸಗಳಿಗೆ ಕೆಲ ಅಧಿಕಾರಿಗಳು ಸಾಥ್‌ ನೀಡಿದ್ದಾರೆ. ಈ ಅಕ್ರಮ ಹಂಚಿಕೆಯಿಂದ ಕೆಐಎಡಿಬಿಗೆ ಕೋಟ್ಯಂತರ ರೂ. ನಷ್ಟವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.