ಬೆಂಗಳೂರು : ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಶಾಲೆಗಳಿಂದ 100 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪ್ರದೇಶಗಳು ಕಂಡುಬರದಂತೆ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ, ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ‘ತಂಬಾಕು ಮುಕ್ತ ಯುವ ಅಭಿಯಾನ 2.0’ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.2024 ಏಪ್ರಿಲ್ ಮಾಹೆಯಿಂದ ಸೆಪ್ಟೆಂಬರ್ ಮಾಯೆಯ ವರೆಗೆ ಜಿಲ್ಲೆಯಲ್ಲಿ ತಂಬಾಕು ತ್ಯಜಿಸಿದ ರೋಗಿಗಳ ಸಂಖ್ಯೆ 265 ಆಗಿದೆ. ಇದೇ ರೀತಿಯಾಗಿ ಇನ್ನು ಹೆಚ್ಚಿನ ಮಟ್ಟದಲ್ಲಿ ತಂಬಾಕನ್ನು ನಿಯಂತ್ರಿಸಲು ಜಿಲ್ಲಾ ಹಾಗೂ ತಾಲ್ಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಲು ತಿಳಿಸಿದರು.