ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿಗಮದಲ್ಲಿ ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ ಎಂದರು.
ಅಲ್ಲದೆ ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಉಳಿದ 13 ಕೋಟಿ ರೂಪಾಯಿಗಳನ್ನು ಸಹ ಎಸ್ಐಟಿ ವಸೂಲಿ ಮಾಡಿಕೊಡುವುದಾಗಿ ತಿಳಿಸಿದೆ. ಹಾಗಾಗಿ ಈ ಒಂದು ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಕೋರ್ಟಿನ ತೀರ್ಪಿನ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.