ನಾಳೆಯಿಂದ ಸಿಇಟಿ-2021 ಪರೀಕ್ಷೆ : ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು, ಒಂದು ಡೆಸ್ಕಿಗೆ ಇಬ್ಬರಿಗೆ ಅವಕಾಶ

Spread the love

28ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತದ ಪರೀಕ್ಷೆ

29ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನಶಾಸ್ತ್ರ ಪರೀಕ್ಷೆ

30ರಂದು ಬೆಳಗ್ಗೆ 11.30ರಿಂದ 12.50 ರ ವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ

ಬೆಂಗಳೂರು: 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಾಳೆಯಿಂದ ರಾಜ್ಯದಲ್ಲಿ ನಡೆಯಲಿದೆ.ಈ ಸಂಬಂಧ ಶುಕ್ರವಾರ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಉನ್ನತ ಅಧಿಕಾರಿಗಳ ಸಭೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನಂತರ ಮಲ್ಲೇಶ್ವರದ 18ನೇ ಕ್ರಾಸ್ ನಲ್ಲಿರುವ ಸರಕಾರಿ ಪಿಯು ಕಾಲೇಜಿಗೆ ತೆರಳಿ ಪರೀಕ್ಷಾ ಸಿದ್ಧತೆಗಳನ್ನು ನೇರವಾಗಿ ವೀಕ್ಷಿಸಿದರು.

ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸವಾಲಿನ ನಡುವೆಯೇ ಸಿಇಟಿ ನಡೆಯುತ್ತಿದ್ದು, ಸರಕಾರದ ಮಾರ್ಗಸೂಚಿಯಂತೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆಗಳನ್ನು ಅವರು ಪರಿಶೀಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದ್ದು. ಸಿಇಟಿ ಅಂಕದ ಆಧಾರದ ಮೇಲೆಯೇ ನಂಬರ್‌ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ 2,01,816 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಸಿಇಟಿ ಬರೆಯಲಿದ್ದಾರೆ. ಇವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದರು.
ರಾಜ್ಯಾದ್ಯಂತ 530 ಪರೀಕ್ಷಾ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅಗಸ್ಟ್ 30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆಯುವಂತೆ ಹಾಗೂ ಪ್ರತಿ ಒಂದು ಬೆಂಚಿನಲ್ಲಿ ಇಬ್ಬರು ಅಭ್ಯರ್ಥಿಗಳು ಕುಳಿತುಕೊಳ್ಳುವಂತೆ ಹಾಗೂ ಎರಡು ಬೆಂಚ್ ನಡುವೆ ಮೂರು ಅಡಿ ಅಂತರ ಕಾಪಾಡಿಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಸ್ವಯಂ ಸೇವಾ ಸಂಸ್ಥೆಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ 100 ಮಾಸ್ಕ್‌ʼಗಳಂತೆ ಪರೀಕ್ಷೆ ನಡೆಯುವ ಎರಡು ದಿನ ಪರೀಕ್ಷಾ ಕೇಂದ್ರಕ್ಕೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.ವಾರಾಂತ್ಯದ ಕರ್ಫ್ಯೂ ಇರುವ ಗಡಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಮತ್ತು ಪೋಷಕರು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ಅನುಕೂಲವಾಗಲು ಸಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರಿಗಣಿಸಿ ಅವಕಾಶ ನೀಡಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಕೇರಳ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಲಾಗಿದೆ ಎಂದರು.
ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ ಎಂದು ತಿಳಿಸಿದರು.